ಅಡಿಗ – 100 ರ ನೆನಪಲ್ಲಿ ಅವರದೊಂದು ಪ್ರಸಿದ್ಧ ಕವಿತೆ..

ಪರಂಪರೆಯ ಬೇರಿನಿಂದಲೇ ಬೆಳೆದು ” ಅನ್ಯರೊರೆದುದನೆ ಬರೆದುದನೆ ಬರೆ ಬರೆದು ಭಿನ್ನಗಾಗಿದೆ ಮನವು” ಎನ್ನುತ್ತಲೇ ನವ್ಯ ಕಾವ್ಯದತ್ತ ಮುಖ ಮಾಡಿ ಅದರ ಆದ್ಯ ಪ್ರವರ್ತಕರೆನಿಸಿದ ಗೋಪಾಲಕೃಷ್ಣ ಅಡಿಗರ ಕಾವ್ಯದ ಹಾದಿಯೆಂದರೆ ಕನ್ನಡ ಸಾಹಿತ್ಯದ ಹೊರಳುದಾರಿಯ ವಿಶಿಷ್ಟ ಕಥನವೂ ಹೌದು.

ಇಂದು ಅಡಿಗರ ನೂರನೇ ಜನುಮದಿನ.

ಬಹುತ್ವ ಸಂಸ್ಕೃತಿಗೆ ಕೊಳ್ಳಿಯಿಡುತ್ತ ದೇಶವನ್ನೇ ಸಾಂಸ್ಕೃತಿಕವಾಗಿ ವಿಘಟಿಸುವತ್ತ ವಿಚ್ಛಿದ್ರಕಾರಿ ಶಕ್ತಿಗಳು ಅಟ್ಟಹಾಸಗೈಯ್ಯುತ್ತಿರುವ ವೇಳೆಯಲ್ಲಿ ಅಡಿಗರ ಈ ಕವಿತೆ ಅತ್ಯಂತ ಸಕಾಲಿಕ ಎನಿಸುತ್ತದೆ..

 

ಮೊಗೇರಿ ಗೋಪಾಲಕೃಷ್ಣ ಅಡಿಗ

ಕಟ್ಟುವೆವು ನಾವು

ಕಟ್ಟುವೆವು ನಾವು ಹೊಸ ನಾಡೊಂದನು, ರಸದ
ಬೀಡೊಂದನು

ಹೊಸನೆತ್ತರುಕ್ಕುಕ್ಕಿ ಆರಿಹೋಗುವ ಮುನ್ನ,
ಹರೆಯದೀ ಮಾಂತ್ರಿಕನ ಮಾಟ ಮುಸುಳುವ ಮುನ್ನ,
ಉತ್ಸಾಹಸಾಹಸದ ಉತ್ತುಂಗ ವೀಚಿಗಳ
ಈ ಕ್ಷುಬ್ಧ ಸಾಗರವು ಬತ್ತಿ ಹೋಗುವ ಮುನ್ನ
ಕಟ್ಟುವೆವು ನಾವು ಹೊಸ ನಾಡೊಂದನು!

ನಮ್ಮೆದೆಯ ಕನಸುಗಳೇ ಕಾಮಧೇನು
ಆದಾವು, ಕರೆದಾವು ವಾ೦ಛಿತವನು;
ಕರೆವ ಕೈಗಿಹುದೋ ಕನಸುಗಳ ಹರಕೆ;
ಗುರಿ ತಪ್ಪದೊಮ್ಮುಖದ ಬಯಕೆ ಬೆಂಬಲಕೆ!

ಜಾತಿ ಮತ ಭೇದಗಳ ಕಂದಕವು ಸುತ್ತಲೂ,
ದುರ್ಭೇದ್ಯವೆನೆ ಕೋಟೆಕೊತ್ತಲಗಳು;
ರೂಢಿರಾಕ್ಷಸನರಸುಗೈಯುವನು, ತೊಳ್ತಟ್ಟಿ
ತೊಡೆತಟ್ಟಿ, ಕರೆಯುವನು ಸಂಗ್ರಾಮಕೆ!

ನಾವು ಹಿಂದೆಗೆವೆವೇ? ವೀರ ತರುಣರು ನಾವು!
ಒಂದೆ ನೆಗೆತಕೆ ನೆಗೆವೆವೋ ಕಂದಕವನು,
ಕುಟ್ಟಿ ಪುಡಿಮಾಡುವೆವು ಕೋಟೆಗಳನು,
ಎದೆಯು ಮೆಟ್ಟಿ ಮುರಿಯುವೆವಸುರರಟ್ಟೆಗಳನು!

ಕೋಟೆಗೋಡೆಗೆ ನಮ್ಮ ಹೆಣಗಳೇ ಮೆಟ್ಟಿಲು,
ನಮ್ಮ ಸಾವೇ ನೋವೆ ಹೊಸ ನಾಡ ತೊಟ್ಟಿಲು
ಆದಾವು; ಅಂಜುವೆದೆ ನಮ್ಮದಲ್ಲ;
ಸೋಲುಬಗೆ ವೀರನಿಗೆ ಸಲ್ಲ, ಹೊಲ್ಲ!

ಎಡರುಗಳ ಕಡಲುಗಳನೀಸಿ ಬರುವೆವು, ಘೋರ
ನೈರಾಶ್ಯದಗ್ನಿಮುಖದಲ್ಲು ಕೂಡ
ಹೊಕ್ಕು ಹೊರಡುವೆವೆಲ್ಲ ತೊಡಕುಗಳ ಒಡಕುಗಳ
ಬಿಡಿಸಿ, ಇಡಿಗೊಳಿಸಿ ಕಟ್ಟುವೆವು ನಾಡ!

ಇಂದು ಬಾಳಿದು ಕೂಳ ಕಾಳಗವು; ಹೊಟ್ಟೆಯೇ
ಕೇಂದ್ರವಾಗಿದೆ ನರನ ಜೀವಿತಕ್ಕೆ;
ಅನ್ನದನ್ಯಾಯದಾವಾಗ್ನಿಯಲಿ ಕರಗುತಿದೆ
ನರತೆ, ಸಂಸ್ಕೃತಿ, ಪ್ರೀತಿ, ದಿವದ ಬಯಕೆ!

ಇರುವೆಲ್ಲವನು ಎಲ್ಲ ಜನಕೆ ತೆರವಾಗಿಸುವ
ಸಮಬಗೆಯ ಸಮಸುಖದ ಸಮದುಃಖದ
ಸಾಮರಸ್ಯದ ಸಾಮಗಾನಲಹರಿಯ ಮೇಲೆ
ತೇಲಿ ಬರಲಿದೆ ನೋಡು, ನಮ್ಮ ನಾಡು!

ಇಲ್ಲೇ ಈ ಎಡೆಯಲ್ಲೆ, ನಮ್ಮ ಮುಂಗಡೆಯಲ್ಲೆ,
ಅಳಲುಗಳ ಹೆಡೆಯಲ್ಲೆ,
ಸೋಲುಗಳ ತೊಡೆಯಲ್ಲೆ
ಅರಳೀತು ನಮ್ಮ ನಾಡು;
ನಮ್ಮೆದೆಯ ತುಂಬಿರುವ ಅದರ ನರುಗಂಪು ಹೊರ
ಹೊಮ್ಮುವುದ ಕಾದು ನೋಡು!

ಉತ್ಸಾಹ ಉದ್ವೇಗ ಉದ್ರೇಕಗಳ ವೀರ
ಯುವಜನದ ನಾಡ ಗುಡಿಯು;
ಅದರ ಹಾರಾಟಕ್ಕೆ ಬಾನೆ ಗಡಿಯು,
ಬರಲು ಬಿಡೆವೆಂದಿಗೂ ಅದಕೆ ತಡೆಯು!
ತಡೆವವರು ಬನ್ನಿರೋ, ಹೊಡೆವವರು ಬನ್ನಿರೋ
ಕೆಡೆನುಡಿವ ಕೆಡೆಬಗೆವ ಕೆಡುಕು ಜನರೇ ಬನ್ನಿ!
ಕೊಟ್ಟೆವಿದೋ ವೀಳೆಯವನು;
ನಿಮ್ಮೆಲರನು ತೊಡೆದು ನಿಮ್ಮ ಮಸಣದ ಮೇಲೆ
ಕಟ್ಟುವೆವು ನಾವು ಹೊಸ ನಾಡೊಂದನು, – ಸುಖದ
ಬೀಡೊಂದನು

 

‍ಲೇಖಕರು Avadhi GK

February 18, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: